ಕರ್ನಾಟಕ ಸಂಭ್ರಮ 50ರ ಸವಿನೆನಪಿಗಾಗಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬುಧವಾರದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, 1956ರ ನವೆಂಬರ್ 1 ರಂದು ಕನ್ನಡ ಭಾಷಿಕ ಪ್ರದೇಶಗಳು ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು.
ನಂತರ 1973ರಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಯಿತು ಎಂದರು.
ಕರ್ನಾಟಕಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರ ಸಂಭ್ರಮಾಚರಣೆ ಮಾಡಬೇಕಿತ್ತು. ಆದರೆ ಅವರು ಮಾಡಲಿಲ್ಲ. ನಮ್ಮ ಸರ್ಕಾರ ಈ ಸಂಭ್ರಮಾಚರಣೆಯನ್ನು ಆಚರಿಸುವು ನಮ್ಮ ಕರ್ತವ್ಯವೆಂದು ಭಾವಿಸಿ, ಇಡೀ ವರ್ಷಕನ್ನಡ ನೆಲ, ಜಲ ಸಾಹಿತ್ಯ, ಸಂಸ್ಕೃತಿ, ಪರಂಪರೆಗಳನ್ನು ಬಿಂಬಿಸುವ ‘ಕರ್ನಾಟಕ ಸಂಭ್ರಮ- 50’ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮ ಉಸಿರು ಕನ್ನಡವಾಗಬೇಕು. ಇಡೀ ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು ಎಂದು ತಿಳಿಸಿದರು.
ಕರ್ನಾಟಕ ಸಂಭ್ರಮದ ಶುಭಸಂದರ್ಭದಲ್ಲಿ ಪ್ರಶಸ್ತಿಗೆ ಭಾಜನರಾಗಿರುವ ಎಲ್ಲ 68 ಪ್ರಶಸ್ತಿ ಪುರಸ್ಕೃತರ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಬಾರಿ 10 ಸಂಘ- ಸಂಸ್ಥೆಗಳಿಗೆ ಈ ವಿಶೇಷವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚು ಅರ್ಹತೆ ಇದ್ದವರನ್ನು ಆಯ್ಕೆ ಮಾಡಬೇಕೆಂಬ ಸೂಚನೆಯನ್ನು ನೀಡಲಾಗಿತ್ತು. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಒಂದು ಹೆಸರನ್ನು ಬಿಟ್ಟು ಬೇರೆ ಯಾರ ಹೆಸರನ್ನು ನಾನು ಸೂಚಿಸಿಲ್ಲ. ಬಹುತೇಕವಾಗಿ ಆಯ್ಕೆ ಸಮಿತಿ ಶಿಫಾರಸ್ಸು ಮಾಡಿದವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು