ಬೆಂಗಳೂರು:ಜನವರಿ 20:ಜಿಲ್ಲಾ, ಪ್ರಾದೇಶಿಕ ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲು ಕೌಶಲಾಭಿವೃದ್ಧಿ, ಜೀವನೋಪಾಯ ಸಚಿವ ಶರಣಪ್ರಕಾಶ ಪಾಟೀಲ ಅಧ್ಯಕ್ಷತೆಯಲ್ಲಿ ಏಳು ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.
ಸಚಿವರಾದ ಎಂ.ಬಿ.ಪಾಟೀಲ, ಎಚ್.ಕೆ.ಪಾಟೀಲ, ಡಾ.ಎಂ.ಸಿ.ಸುಧಾಕರ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಬಿ.ನಾಗೇಂದ್ರ ಹಾಗೂ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.ಬೃಹತ್, ಸಣ್ಣ ಕೈಗಾರಿಕೆ, ಸಾಫ್ಟ್‌ವೇರ್ ಉದ್ಯಮಿಗಳ ಸಹಯೋಗದಲ್ಲಿ ರಾಜ್ಯ, ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸುವುದು, ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ಯುವಕ–ಯುವತಿಯರಿಗೆ ಉದ್ಯೋಗ ದೊರಕಿಸಲು ಸಮಿತಿ ನಿರಂತರವಾಗಿ ಶ್ರಮಿಸಲಿದೆ ಎಂದು ಶರಣಪ್ರಕಾಶ ಪಾಟೀಲ ಹೇಳಿದರು.
ಕನ್ನಡಿಗರಿಗೆ ಉದ್ಯೋಗದ ಅವಕಾಶಗಳನ್ನು ಕಲ್ಪಿಸಲು ಸರ್ಕಾರ ಹಲವು ಉದ್ಯೋಗ ಮೇಳಗಳನ್ನು ಹಮ್ಮಿಕೊಳ್ಳಲಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶ್ರಮಿಸಲಿದೆ. ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿದೆ. ಐಟಿ- ಬಿಟಿ, ಹೋಟೆಲ್, ಉತ್ಪಾದನಾ ಕ್ಷೇತ್ರ, ಬ್ಯಾಂಕಿಂಗ್ ವಲಯಗಳಲ್ಲಿ ಗ್ರಾಮೀಣ ಭಾಗದ ಯುವಕ- ಯುವತಿಯರಿಗೆ ಹೆಚ್ಚಿನ ಅವಕಾಶ ದೊರಕಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.