ಬೆಂಗಳೂರು :ಫೆಬ್ರವರಿ 27: ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಳೆದಬಾರಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಕಡಿಮೆ ಪ್ರಗತಿ ಹೊಂದಿರುವ ದುರ್ಬಲ ಪ್ರದೇಶಗಳ ಮೇಲೆ ಹೆಚ್ಚಿನ ನಿಗವಹಿಸುವ ಮೂಲಕ ಈ ಬಾರಿ ಯಾವುದೇ ಐದು ವರ್ಷದೊಳಗಿನ ಮಗು ಪಲ್ಸ್ ಪೋಲಿಯೊ ಲಸಿಕೆಯಿಂದ ವಂಚಿತವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ.ಶಾಲಿನಿ ರಜನೀಶ್ ತಿಳಿಸಿದರು.
ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆದ ರಾಜ್ಯ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಬಾರಿ ಯಾವ ಪ್ರದೇಶದಲ್ಲಿ ಯಾವ ಕಾರಣಕ್ಕೆ ಪಲ್ಸ್ ಪೋಲಿಯೊ ಲಸಿಕೆಯ ಅನುಷ್ಠಾನದಲ್ಲಿ ಕಡಿಮೆ ಪ್ರಗತಿ ಹೊಂದಲಾಗಿದೆಯೋ, ಅಂತಹ ಪ್ರದೇಶಗಳನ್ನು ಗುರುತಿಸಿ, ಕಾರಣ ಪತ್ತೆ ಹಚ್ಚಿ ಸೂಕ್ತ ಮೂಲಸೌಕರ್ಯ ಒದಗಿಸುವ ಜೊತೆಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.
ಆರೋಗ್ಯ ಇಲಾಖೆಯ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಬಂಧಿಸಿದ ಸರ್ಕಾರದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಆರೋಗ್ಯ ಕ್ಷೇತ್ರ ಸೇರಿದಂತೆ ಇತರೆ ಪೂರಕ ಸಂಘಸಂಸ್ಥೆಗಳ ಸಹಕಾರ ಪಡೆದು, ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಸಮರ್ಪಕ ಮೂಲಭೂತ ಸೌಕರ್ಯಗಳ ಬಳಕೆಯಿಂದ ಸಿಬ್ಬಂದಿಗಳ ಕಾರ್ಯದೊತ್ತಡ ಕಡೆಮೆ ಮಾಡಿಮೆಯಾಗುತ್ತದೆ ಹಾಗೂ ಹೆಚ್ಚಿನ ಮಕ್ಕಳಿಗೆ ಲಸಿಕೆಯನ್ನು ನೀಡಬಹುದು ಎಂದು ತಿಳಿಸಿದರು.
ನಗರ ಅಥವಾ ಗ್ರಾಮೀಣ ಪ್ರದೇಶವಾಗಲಿ, ಪ್ರದೇಶಕ್ಕೆ ಅನುಕೂಲವಾಗುವ ಸೂಕ್ತ ಯೋಜನೆಯನ್ನು ರೂಪಿಸಿಕೊಂಡು, ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಅನುಷ್ಠಾನಗೊಂಡರೆ, ಎಲ್ಲಾ ಅರ್ಹ ಮಕ್ಕಳು ಲಸಿಕೆ ಪಡೆಯಬಹುದು. ಅಲ್ಲದೇ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮದ ಕುರಿತು ಮುಂಚಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಪಲ್ಸ್ ಪೋಲಿಯೊ ಲಸಿಕೆಯ ಅನುಷ್ಠಾನ ಕಾರ್ಯದಲ್ಲಿ ಸೂಕ್ತ ಮೇಲುಸ್ತುವಾರಿ ಹಾಗೂ ನಿರ್ವಹಣೆಯಾಗಬೇಕು. ಇದರಿಂದ, ಲಸಿಕೆ ಪಡೆದ ಮಕ್ಕಳ ಮಾಹಿತಿ ಸಂಗ್ರಹಿಸಲು ಅನುಕೂಲವಾಗಲಿದೆ. ರಾಷ್ಟ್ರೀಯ ಹೆದ್ದಾರಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಟೂಲ್ ಪ್ರದೇಶ ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಬೇಕು. ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಅಂಗವಾಗಿ ಮೊದಲ ದಿನ ಲಸಿಕಾ ಕೇಂದ್ರಗಳಲ್ಲಿ ಹಾಗೂ ಉಳಿದ ಮೂರು ದಿನ ಮನೆಗಳಿಗೆ ಭೇಟಿ ನೀಡಿ ಲಸಿಕೆಯನ್ನು ನೀಡಲಾಗುವುದು. ಲಸಿಕಾ ಕಾರ್ಯದಲ್ಲಿ ತೊಡಗುವ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಗೌರವ ಧನ ಸೂಕ್ತ ಸಮಯದಲ್ಲಿ ಸಿಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಜಿಲ್ಲಾವಾರು ಲಸಿಕೆ ಪಡೆಯುವ ಮಕ್ಕಳ ಮಾಹಿತಿ ಸಂಗ್ರಹಣೆಗೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಲಸಿಕೆ ಕಾರ್ಯಕ್ರಮದ ಬಗ್ಗೆ ಎಲ್ಲಾ ಹಂತಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಈ ಸಭೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೊಹಸೀನ್, ರಾಷ್ಟ್ರೀಯ ಅರೋಗ್ಯ ಮಿಷನ್ ನ ಮಿಷನ್ ಡೈರೆಕ್ಟರ್ ಡಾ. ನವೀನ್ ಭಟ್ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.