ಉಡುಪಿ:ಫೆಬ್ರವರಿ 29:- ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಿರಲಿವೆ.
ಈ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ. ವಿಷಯಗಳನ್ನು ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ.
ಈ ಬಾರಿ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಆಫರ್ ಘೋಷಿಸಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.