ಬೆಂಗಳೂರು :ಮಾರ್ಚ್ 19: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಮೂಲಕ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಕೆಎಸ್‌ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕು ದಿನಾಂಕ 14-03-2024ರಂದು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 25.03.2024 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ.
ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.