ಬೆಂಗಳೂರು : ಮಾರ್ಚ್ 20: ರಾಜ್ಯಾದ್ಯಂತ ಎಲ್ಲ ಕಡೆ ಪೊಲೀಸರು ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ಪೊಲೀಸ್ ಸಿಬ್ಬಂದಿ ಬೈಕ್‌ನಿಂದ ಬಿದ್ದು ತಲೆಗೆ ಗಾಯವಾಗಿ ಮೃತಪಡುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಎಲ್ಲ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಸಂಚಾರಿ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿರುವ ಅಲೋಕ್ ಕುಮಾರ್ ಅವರು ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕಲವರು ಮೃತಪಟ್ಟಿರುವ ಘಟನಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ. ಹೀಗಾಗಿ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ