ಪುತ್ತೂರು: ಏಪ್ರಿಲ್ 18:ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ.
ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.