ಬೆಂಗಳೂರು : ಏಪ್ರಿಲ್ 22 : ಸೋಮವಾರ (ಏ.29)ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಹೇಳಿದೆ.
ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು (ಏ.22) ಅರ್ಜಿ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿದರು
ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿತು.
ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿ ಏನಿತ್ತು?
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ 2023ರ ಡಿಸೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದರು.
ಹೀಗಾಗಿ ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದರಲ್ಲಿ 4663 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದರು. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದರು.
ಜೊತೆಗೆ ಎನ್.ಡಿ.ಆರ್.ಎಫ್. ನಿಂದ 4663 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದರು. ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದರು.