ಉಡುಪಿ , ಜುಲೈ.09: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ತಿಳಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ