ಮಂಗಳೂರು :ಆಗಸ್ಟ್ 19:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆಗೆ ಕರೆ ಕೊಟ್ಟಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿದ್ದು, ಮಂಗಳೂರಿನಲ್ಲಿ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.
ಮಂಗಳೂರಿನ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೆಲವರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಬಸ್ ಗಾಜುಗಳು ಸಂಪೂರ್ಣ ಪುಡಿ ಪುಡಿಯಾಗಿದೆ ಎಂದು ವರದಿಯಾಗಿದೆ.
ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ ಸೇರಿದಂತೆ ರಾಜ್ಯದ ಹಲವಡೆ ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಚಾಮುಂಡಿ ಬೆಟ್ಟದ ವ್ಯಾಪಾರಿಗಳು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಬಂದ ಭಕ್ತರಿಗೂ ಪ್ರತಿಭಟನೆಯ ಬಿಸಿ ತಟ್ಟಿದೆ. ಪ್ರತಿಭಟನೆಯಲ್ಲಿ ವ್ಯಾಪಾರಿಗಳು ಹಾಗೂ ನಿವಾಸಿಗಳೂ ಭಾಗಿಯಾಗಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಸಜ್ಜಾಗಿದ್ದು, ಇಂದು ರಾಜ್ಯಪಾಲರ ವಿರುದ್ಧ ದೂರು ಸಲ್ಲಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ.