ಉಡುಪಿ : ಡಿಸೆಂಬರ್ 25: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು.
ಅಪಘಾತದಲ್ಲಿ ಸಾವನ್ನಪ್ಪಿದ ಐವರಲ್ಲಿ ಒಬ್ಬ ಯೋಧನನ್ನು ಕುಂದಾಪುರ ಬೀಜಾಡಿಯ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ 18 ಯೋಧರು ಪ್ರಯಾಣಿಸುತ್ತಿದ್ದ ಟ್ರಕ್ ಇಕ್ಕಟ್ಟಾದ ರಸ್ತೆಯಿಂದ ಕಣಿವೆಗೆ ಉರುಳಿದೆ. ಅಪಘಾತದಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅನೂಪ್ 13 ವರ್ಷಗಳ ಹಿಂದೆ ಸೇನೆಗೆ ಸೇರ್ಪಡೆಗೊಂಡಿದ್ದರು. ಪ್ರಸ್ತುತ ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಡಿ.15 ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದಲ್ಲಿ ಪಾಲ್ಘೊಂಡಿದ್ದಲ್ಲದೆ ಮಗಳ ಹುಟ್ಟುಹಬ್ಬವನ್ನು ಆಚರಿಸಿ ಬಳಿಕ ಸೇನೆಗೆ ಹಿಂತಿರುಗಿದ್ದರು. ಅನೂಪ್ ಜೊತೆಗಿದ್ದ ಸ್ನೇಹಿತ ಯೋಧ ಆಂಜನೇಯ ಪಾಟೀಲ್ ತನ್ನ ಸಹೋದರ ನೊಂದಿಗೆ ತಡರಾತ್ರಿ ಹೊರಟು ಬಂದು ಬೆಳಿಗ್ಗೆ ಮೃತ ಯೋಧನ ಮನೆಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಿತವಾಗಿರುವ ಅನೂಪ್ ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ಅನೂಪ್ ಅವರು ಪತ್ನಿ, ತಾಯಿ, ಇಬ್ಬರು ಸಹೋದರಿಯರು, ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಾಳೆ (ಗುರುವಾರ) ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗ್ರಾಮಸ್ಥರ ನೇತೃತ್ವದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗುತ್ತಿದೆ.