ಮಂಗಳೂರು : ಜನವರಿ 04:ಗ್ರಾಹಕರ ಹಕ್ಕುಗಳ ಉಲ್ಲಂಘನೆ ಬಗ್ಗೆ ಪ್ರಶ್ನಿಸಲು ಅರಿವು ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ವಾಜೀದ ಬಾನು ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯ ವಿಭಾಗವು ಆಯೋಜಿಸಿದ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಡಾ. ವಾಜೀದ ಬಾನು ಮಾತನಾಡುತ್ತಾ ವಿದ್ಯಾರ್ಥಿಗಳು 1986ರ ಗ್ರಾಹಕ ಸಂರಕ್ಷಣಾ ಕಾಯ್ದೆಯಡಿ ಒದಗಿಸಲಾಗಿರುವ ಗ್ರಾಹಕರ ಹಕ್ಕುಗಳ ಬಗ್ಗೆ ಶಿಕ್ಷಣ ಮತ್ತು ಗ್ರಾಹಕರ ಹಕ್ಕುಗಳ ಉಲ್ಲಂಘನೆ ಬಗ್ಗೆ ಪ್ರಶ್ನಿಸಲು ಮತ್ತು ನ್ಯಾಯಕ್ಕಾಗಿ ಹೋರಾಡಲು ಸರಿಯಾದ ಅರಿವು ಮತ್ತು ಆತ್ಮವಿಶ್ವಾಸವನ್ನು ಹೊಂದಿರಬೇಕು.
ನೈಜ ಜೀವನದ ಪರಿಸ್ಥಿತಿಗಳ ಕುರಿತು ಜ್ಞಾನವನ್ನು ಪಡೆಯಬೇಕು ಮತ್ತು ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಮಾಡಿಕೊಳ್ಳಬೇಕು. ನಾಗರಿಕರು ಮತ್ತು ಗ್ರಾಹಕರಾಗಿ ನಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿಯನ್ನು ಮತ್ತು ಶಾಶ್ವತ ಬಳಕೆಯ ವಸ್ತುಗಳನ್ನು ಉಪಯೋಗಿಸಬೇಕು ಎಂದು ನುಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ತರಾದ ಡಾ. ಪ್ರೀತಿ ಕೀರ್ತಿ ಡಿಸೋಜಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸ್ಟಾಫ್ ಕೋ- ಆರ್ಡಿನೇಟರ್ ಗುರುರಾಜ್ ಪಿ. ಮತ್ತು ವೈಶಾಲಿ ಕೆ. ಉಪಸ್ಥಿತರಿದ್ದರು.
ಸಮೃದ್ಧಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ಧನ್ಯಶ್ರೀ ಎಸ್. ವೈ. ವಂದಿಸಿದರು.