ಬೆಂಗಳೂರು: ವಿಧಾನಸೌಧದಲ್ಲಿ ಮಹತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತ ಐದು ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಚರ್ಚೆ ನಡೆಯುತ್ತಿದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯ ಬಳಿಕ, ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕೃತ ಜಾರಿಗೊಳಿಸುವಂತ ಘೋಷಣೆ ಮಾಡಲಾಗುತ್ತಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿತ್ತು. ಅವುಗಳೆಂದರೇ ಪ್ರತಿ ಮನೆಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ‘ಗೃಹಜ್ಯೋತಿ’ಯನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ‘ಗೃಹ ಲಕ್ಷ್ಮಿ’ – ಕುಟುಂಬದ ಪ್ರತಿಯೊಬ್ಬ ಮಹಿಳೆಗೆ 2,000 ರೂ. ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ವಿತರಿಸಲು ‘ಅನ್ನ ಭಾಗ್ಯ’. ‘ಯುವ ನಿಧಿ’ – ನಿರುದ್ಯೋಗಿ ಪದವೀಧರರಿಗೆ 3,000 ರೂ., ನಿರುದ್ಯೋಗಿ ಡಿಪ್ಲೊಮಾ ಹೊಂದಿರುವವರಿಗೆ ಎರಡು ವರ್ಷಗಳವರೆಗೆ (18-25 ವಯೋಮಾನದವರಿಗೆ) 1,500 ರೂ. ಮತ್ತು ‘ಶಕ್ತಿ’ – ಕರ್ನಾಟಕದಾದ್ಯಂತ ಮಹಿಳೆಯರಿಗೆ ರಾಜ್ಯ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ಅನುವು ಮಾಡಿಕೊಡುವುದು.
ಈ ಯೋಜನೆಗಳನ್ನು ಜಾರಿಗೊಳಿಸುವ ಸಂಬಂಧ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ 8 ಮಂದಿ ಸಚಿವರೊಂದಿಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಯೋಜನೆಗಳ ಜಾರಿಗೆ ಸಂಬಂಧ ಚರ್ಚೆಯ ನಂತ್ರ ಸುದ್ದಿಗೋಷ್ಠಿ ನಡೆಸಲಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಾರಿಯ ಅಧಿಕೃತ ಘೋಷಣೆ ಮಾಡಲಿದ್ದಾರೆ. ಕೆಲವೇ ಕ್ಷಣಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವಂತ ಅಧಿಕೃತ ಘೋಷಣೆ ಹೊರ ಬೀಳಲಿದೆ.