ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೂ ಉತ್ತಮ ಮಳೆಯಾಗುತ್ತಿದೆ. ಈ ಮಾಸಾಂತ್ಯದ ವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಜೂನ್ 30ರವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಜಿಲ್ಲಾಡಳಿತ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 44 ರಿಂದ 48 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗಗಳಲ್ಲಿ ವಾಸಿಸುವ ಮೀನುಗಾರರು, ಪ್ರವಾಸಿಗರು ಸ್ಥಳೀಯ ವೀಕ್ಷಕರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಕಳೆದ ಎರಡು ದಿನಗಳಿಂದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿಯೂ ಉತ್ತಮ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸರಾಸರಿ 59.8 ಮಿ.ಮೀ. ಮಳೆಯಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಕುಂದಾಪುರ ತಾಲೂಕಿನಲ್ಲಿ 98.7 ಮಿ.ಮೀ. ಮಳೆಯಾಗಿದೆ. ಬೈಂದೂರಿನಲ್ಲಿ 81.1 ಹೆಬ್ರಿಯಲ್ಲಿ 43.9 ಮಿ.ಮೀ.ಕಾರ್ಕಳದಲ್ಲಿ 41.4ಮಿ.ಮೀ., ಬ್ರಹ್ಮಾವರದಲ್ಲಿ 33 ಮಿ.ಮೀ, ಕಾಪುವಿನಲ್ಲಿ32.9 ಮಿ.ಮೀ, ಉಡುಪಿಯಲ್ಲಿ 30.6ಮಿ.ಮೀ. ಮಳೆಯಾಗಿದೆ.