ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 27ರಂದು ರಾಜ್ಯದ 11000 ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲಾಗುವುದು. ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಕುರಿತು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.
ಆಗಸ್ಟ್ 20ರಂದು ಅಥವಾ 24ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಒಂದು ವಾರ ಮುಂದೂಡಲಾಗಿದ್ದು, ಇದೀಗ ಆಗಸ್ಟ್ 27ರಂದು ಬೆಳಗಾವಿಯಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ.
ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಯೋಜನೆಗೆ ಚಾಲನೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಏಕಕಾಲಕ್ಕೆ 11000 ಸ್ಥಳಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು. ಜೂಮ್, ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿದ್ದು, ಸಂಭ್ರಮಾಚರಣೆಗೆ ಸೂಚನೆ ನೀಡಲಾಗಿದೆ.
1.05 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ 2,000 ರೂ. ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ,ಕೆ, ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಲಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.