ಉಡುಪಿ : ಉಡುಪಿಯಲ್ಲಿ ಜನ್ಮಾಷ್ಟಮಿ ಸಂಭ್ರಮ ಮನೆ ಮಾಡಿದೆ. ಈಗಾಗಲೇ ಅನೇಕ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ.
ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಲಕ್ಷತುಳಸಿ ಅರ್ಚನೆ ನಡೆಸಿ ಮಹಾಪೂಜೆ ನೆರವೇರಿಸಲಿದ್ದಾರೆ.ನಂತರ ಲಡ್ಡಿಗೆ ಮುಹೂರ್ತ ನಡೆಯಲಿದೆ. ತಡ ರಾತ್ರಿ ವರೆಗೆ ಕೃಷ್ಣ ಮಠದಲ್ಲಿ ಭಜನೆ, ಪೂಜೆ ಕಾರ್ಯಕ್ರಮಗಳು ನೆರವೇರಲಿದೆ. ಸೆ.6-7 ರಂದು ಬೆಳಿಗ್ಗೆಯಿಂದ ರಾತ್ರಿವರೆಗೆ ಕೃಷ್ಣ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ.
ಸೆ.7ರಂದು ರಥಬೀದಿಯಲ್ಲಿ ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಬೆಳಿಗ್ಗೆ 10ರಿಂದ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ರಥಬೀದಿಯಲ್ಲಿ ಸ್ವರ್ಣರಥದಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಮತ್ತು ಅನಂತೇಶ್ವರ, ಚಂದ್ರಮೌಳೇಶ್ವರ ದೇವಸ್ಥಾನದ ಉತ್ಸವ ಮೂರ್ತಿಗಳನ್ನು ನವರತ್ನ ರಥದಲ್ಲಿ ಮೆರವಣಿಗೆ ನಡೆಸಲಾಗುವುದು.
ಈ ವೇಳೆ ಮೊಸರು ಕುಡಿಕೆ ಒಡೆಯುವ ಕಾರ್ಯಕ್ರಮ ನಡೆಯಲಿದ್ದು ಪರ್ಯಾಯ ಶ್ರೀಪಾದರು ಉಂಡೆ, ಚಕ್ಕುಲಿ ಪ್ರಸಾದವನ್ನು ಮೆರವಣಿಗೆ ವೇಳೆ ಭಕ್ತರಿಗೆ ಹಂಚಲಾಗುವುದು ನಂತರ ಮೂರ್ತಿಯನ್ನು ಮಧ್ವ ಸರೋವರದಲ್ಲಿ ಜಲಸ್ತಂಭನ ಮಾಡಲಾಗುತ್ತದೆ