ಉಡುಪಿ : ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಸೆಪ್ಟೆಂಬರ್ 15ರಂದು ಬೆಳಗ್ಗೆ 10ಗಂಟೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನುಆಚರಿಸಿ ವಿಶ್ವದಾಖಲೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಈ ಸಂಬಂಧ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅಜ್ಜರಕಾಡು ಕ್ರೀಡಾಂಗಣದಲ್ಲಿ ಬೆಳಗ್ಗೆ ಹತ್ತು ಗಂಟೆಗೆ ಆಯೋಜಿಸಲಾಗಿದ್ದು, ಇದರಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸುಮಾರು ಐದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.
ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶೈಕ್ಷಣಿಕ ಸಂಸ್ಥೆಗಳು, ಮಣಿಪಾಲ ಮಾಹೆ, ಸರಕಾರಿ, ಅರೆ ಸರಕಾರಿ, ನಿಗಮ ಮಂಡಳಿಗಳು, ಗ್ರಾಪಂ ಕೇಂದ್ರಗಳಲ್ಲಿ ಸಿಬ್ಬಂದಿ, ಸಾರ್ವಜನಿಕರು, ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕಾರ್ಮಿಕರು, ನೌಕರರು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸಂಬಂಧಪಟ್ಟವರು www.thepreamble-swdkar.in ವೆಬ್‌ಸೈಟ್ ನಲ್ಲಿ ನೊಂದಣಿ ಮಾಡಿ ಏಕಕಾಲದಲ್ಲಿ ಸಂವಿಧಾನ ಪೀಠಿಕೆಯನ್ನು ಓದಬೇಕು ಎಂದು ಅವರು ತಿಳಿಸಿದರು.