ಉಡುಪಿ, ಸೆ,15 :ಸೆಪ್ಟೆಂಬರ್.17 ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯಿಂದ ಆರಂಭಗೊಂಡು ಅ.2 ಗಾಂಧಿ ಜಯಂತಿ ಆಚರಣೆಯ ವರೆಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲೆಯಾದ್ಯಂತ ವಿವಿಧ ಸೇವಾ ಚಟುವಟಿಕೆಗಳ ಮೂಲಕ ಸೇವಾ ಪಾಕ್ಷಿಕ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣದ ನಿಟ್ಟಿನಲ್ಲಿ ನಡೆಯುವ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ, ಸ್ವಚ್ಛತಾ ಅಭಿಯಾನ, ಆಯುಷ್ಮಾನ್ ಭವ ಕಾರ್ಯಕ್ರಮಗಳ ಸಹಿತ ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಜನ್ಮದಿನ, ಸೆ.25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮದಿನ ಹಾಗೂ ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಪ್ರತೀ ಮಂಡಲ ಮತ್ತು ಬೂತ್ ಮಟ್ಟದಲ್ಲಿ ಆಚರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕಿಶೋರ್ ಕುಮಾರ್ ಕುಂದಾಪುರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಸವಿತಾ ಎಸ್. ಕೋಟ್ಯಾನ್, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಸಹಿತ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ವಿವಿಧ ಕಾರ್ಯಕ್ರಮಗಳ ಜವಾಬ್ದಾರಿ ನಿರ್ವಹಣೆಯ ತಂಡಗಳ ವಿವರಗಳನ್ನು ನೀಡಿ ಮಾತನಾಡಿ, ಕಳೆದ 8 ವರ್ಷಗಳಿಂದ ಸೇವಾ ಪಾಕ್ಷಿಕ ಅಭಿಯಾನ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದು ಬಂದಿದೆ. ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕ್ರಾಂತಿಕಾರಿ ಹೆಜ್ಜೆಗಳೊಂದಿಗೆ ಹೆಚ್ಚಿನ ಒತ್ತನ್ನು ನೀಡಿದೆ. ನೂರಾರು ಜನಪರ ಯೋಜನೆಗಳ ಸಹಿತ ವಿಶ್ವ ಮಟ್ಟದಲ್ಲಿ ದೇಶದ ವರ್ಚಸ್ಸನ್ನು ಹೆಚ್ಚಿಸಿರುವ ಪ್ರಧಾನಿ ಮೋದಿ ಆಡಳಿತ ವೈಖರಿ ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಿದೆ. ಈ ನಿಟ್ಟಿನಲ್ಲಿ ಸೆ.17ರಿಂದ ಅ.2ರ ವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಬೇಕು ಎಂದರು.
ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು