ಉಡುಪಿ : ಜಿಲ್ಲೆಯಲ್ಲಿ ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸೆಪ್ಟಂಬರ್ 26 ರಿಂದ ಅಕ್ಟೋಬರ್ 25 ರ ವರೆಗ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಅವಧಿಯಲ್ಲಿ ಯಾವುದಾದರೂ ಜಾನುವಾರುಗಳಿಗೆ ಲಸಿಕೆ ನೀಡದೆ ಬಿಟ್ಟುಹೋದಲ್ಲಿ ಅಂತಹ ಜಾನುವಾರು ಮಾಲೀಕರು ಸಮೀಪದ ಪಶುವೈದ್ಯರನ್ನು ಸಂಪರ್ಕಿಸಿ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.