ಉಡುಪಿ, ಸೆಪ್ಟಂಬರ್ 23 : ದೃಶ್ಯ ನ್ಯೂಸ್ : ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ನೀಡಿ, ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದ್ರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತೀ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತೀ ತಿಂಗಳು “ಜನತಾದರ್ಶನ” ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟಂಬರ್ 25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾದರ್ಶನ” ಕಾರ್ಯಕ್ರಮವನ್ನು ನಡೆಸಲು ನಿರ್ದೇಶನ ನೀಡಿರುತ್ತಾರೆ.
ಸರ್ಕಾರದ ಆದೇಶದಂತೆ, ಜಿಲ್ಲೆಯಲ್ಲಿ ನಾಗರಿಕರಿಂದ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಜಿಲ್ಲೆಯಲ್ಲಿ ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಸೆಪ್ಟಂಬರ್ 25 ರಂದು ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಉದ್ಘಾಟಿಸಲಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ಸರ್ಕಾರಿ ಕೆಲಸದ ತಮ್ಮ ಅಹವಾಲುಗಳೇನಾದರೂ ಇದ್ದರೆ, ತಾವು ಖುದ್ದಾಗಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.